ಅಬಕಾರಿ ಇಲಾಖೆಯಲ್ಲಿ 700 ಕೋಟಿ ರೂ. ಭ್ರಷ್ಟಾಚಾರ ಆರೋಪ ಪ್ರಧಾನಿ ಮೋದಿ ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ: ಸಿಎಂ ಸವಾಲು
ಮೈಸೂರು: “ಅಬಕಾರಿ ಇಲಾಖೆಯಲ್ಲಿ 700 ಕೋಟಿ ರೂ. ಭ್ರಷ್ಟಾಚಾರ ಆಗಿದೆ ಎಂದು ಸುಳ್ಳಾರೋಪ ಮಾಡುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅದನ್ನು ಸಾಬೀತುಪಡಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಸಾಬೀತುಪಡಿಸುವಲ್ಲಿ ವಿಫಲರಾದರೆ ಮೋದಿ ಪ್ರಧಾನಿ ಸ್ಥಾನ ತ್ಯಜಿಸುತ್ತಾರೆಯೇ?'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಬುಧವಾರ ರಾಮಕೃಷ್ಣ ನಗರದಲ್ಲಿರುವ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮ ಸರಕಾರ ಭ್ರಷ್ಟಾಚಾರ ಮಾಡಿಲ್ಲ. ಮಾಡಲೂ ಬಿಡುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳ ಚುನಾವಣೆ ಪ್ರಚಾರ ಸಭೆಗಳಲ್ಲಿ ಕರ್ನಾಟಕದ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಅಬಕಾರಿ ಇಲಾಖೆಯಲ್ಲಿ 700 ಕೋಟಿ ರೂ. ಭ್ರಷ್ಟಾಚಾರ ಮಾಡಲಾಗಿದೆ ಎಂದು ಸುಳ್ಳು ಆರೋಪ ಮಾಡುತ್ತಿದ್ದಾರೆ. ಇದರಲ್ಲಿ ಒಂದೇ ಒಂದು ರೂಪಾಯಿ ಭ್ರಷ್ಟಾಚಾರ ಆಗಿರುವುದನ್ನು ಸಾಬೀತುಪಡಿಸಿದರೆ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ'' ಎಂದರು.
ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಕೋವಿಡ್ ಹೆಸರಿನಲ್ಲಿ ಲೂಟಿ ಹೊಡೆದಿದ್ದಾರೆ. ಕೊರೋನ ಸಂದರ್ಭದಲ್ಲಿ ಬಿಜೆಪಿ ಸರಕಾರ ಮಾಡಿರುವ ಅವ್ಯವಹಾರಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಡಿ'ಕುನ್ಹಾ ಆಯೋಗ ವರದಿ ಸಲ್ಲಿಸಿದ್ದಾರೆ. ಔಷಧಿ ಖರೀದಿಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ. 330 ರೂ. ಗೆ ಸಿಗುವ ಪಿಪಿಇ ಕಿಟ್ ಅನ್ನು 2,140 ರೂ. ಕೊಟ್ಟು ಖರೀದಿಸಿದ್ದಾರೆ. ಭ್ರಷ್ಟಾಚಾರ ಮಾಡುತ್ತಿರುವವರು ಯಾರು ಎಂದು ಪ್ರಶ್ನಿಸಿದರು.
ಪ್ರಧಾನಮಂತ್ರಿ ಆದವರು ಸುಳ್ಳು ಹೇಳಬಾರದು. ಮೋದಿ ಅವರಿಗೆ ಕರ್ನಾಟಕದಲ್ಲಿನ ಅಭಿವೃದ್ಧಿ ಸಹಿಸಲು ಆಗುತ್ತಿಲ್ಲ. ಅದಕ್ಕೆ ಯಾವಾಗಲೂ ಕರ್ನಾಟಕ ವನ್ನು ಮತ್ತು ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು.
ಬಂಡಿಪುರದಲ್ಲಿ ರಾತ್ರಿ ಸಂಚಾರಕ್ಕೆ ಸಂಬಂಧಿಸಿ ದಂತೆ ನಮ್ಮ ಮುಂದೆ ಯಾವ ಪ್ರಸ್ತಾವವೂ ಇಲ್ಲ. ಸರಕಾರದ ಮುಂದೆ ಇಂತಹ ಯಾವ ವಿಚಾರವೂ ಬಂದಿಲ್ಲ ಎಂದು ಹೇಳಿದರು.
ಝಮೀರ್ ಹೇಳಿಕೆ ಸರಿಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಹಾಗಾದರೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು, ರಾಜ್ಯದ ಮುಖ್ಯಮಂತ್ರಿ ಕುರಿತು ಅವರ ಸೊಕ್ಕು ಮುರಿಯು ತೇನೆ, ಗರ್ವಭಂಗ ಮಾಡುತ್ತೇವೆ ಎಂದರಲ್ಲವೇ ಅದು ಸರಿಯೇ? ಎಂದು ಪ್ರಶ್ನಿಸಿದರು.