ಕಾರವಾರ: ಮತದಾರರ ಪಟ್ಟಿ ಪರಿಷ್ಕರಣೆ ದೋಷವಿದ್ದಲ್ಲಿ ಗಮನಕ್ಕೆ ತನ್ನಿ: ರಿತೀಶ್ ಕುಮಾರ್ ಸಿಂಗ್
ಕಾರವಾರ: ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಯಾವುದೇ ಲೋಪಗಳು ಹಾಗೂ ಮತದಾರರ ಪಟ್ಟಿಯಲ್ಲಿ ದೋಷಗಳಲ್ಲಿದ್ದಲ್ಲಿ ತಮ್ಮ ಗಮನಕ್ಕೆ ತರುವಂತೆ ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲೆಯ ಮತದಾರರ ಪಟ್ಟಿಯ ವೀಕ್ಷಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೀಶ್ ಕುಮಾರ್ ಸಿಂಗ್ ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ, ಜಿಲ್ಲೆಯ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮುಕ್ತ, ಪಾರರ್ದಶಕ ಮತ್ತು ಶಾಂತಿಯುತ ಚುನಾವಣೆ ನಡೆಯಲು ಮತದಾರರ ಪಟ್ಟಿ ಸಮರ್ಪಕವಾಗಿರುವುದು ಅತ್ಯಂತ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ರಮದ ಮೂಲಕ ನಿಧನರಾದ ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕುವ, ಮತದಾರರ ವಿಳಾಸ ಬದಲಾವಣೆ, ಹೆಸರು ಬದಲಾವಣೆ, ಅಗತ್ಯ ತಿದ್ದುಪಡಿ, ಹೊಸ ಮತದಾರರ ಸೇರ್ಪಡೆ, ಯುವ ಮತದಾರರ ಸೇರ್ಪಡೆ ಕಾರ್ಯಕ್ರಮ ನಡೆಯುತ್ತಿದೆ. ಈ ಸಂದರ್ಭದಲ್ಲಿ ಯಾವುದೇ ದೋಷಗಳು ಕಂಡು ಬಂದಲ್ಲಿ ಜಿಲ್ಲಾ ಚುನಾವÀಣಾಧಿಕಾರಿಗಳ ಗಮನಕ್ಕೆ ತರುವ ಮೂಲಕ ಜಿಲ್ಲೆಯಲ್ಲಿ ಶುದ್ದ ಮತದಾರರ ಪಟ್ಟಿ ಪ್ರಕಟಣೆಗೆ ಸಹಕಾರ ನೀಡುವಂತೆ ತಿಳಿಸಿದರು.
ಈಗಾಗಲೇ ಜಿಲ್ಲೆಯ ಎಲ್ಲಾ ಮತಗಟ್ಟೆಗಳ ವ್ಯಾಪ್ತಿಯಲ್ಲಿ ರಾಜಕೀಯ ಪಕ್ಷಗಳ ಮೂಲಕ ಬೂತ್ ಮಟ್ಟದ ಏಜೆಂಟ್‌ಗಳ ನೇಮಕ ಮಾಡಲಾಗಿದ್ದು, ಅವರ ಮೂಲಕ ಬೂತ್ ಮಟ್ಟದಲ್ಲಿ ಮತದಾರರ ಪಟ್ಟಿಯಲ್ಲಿನ ಸಮಸ್ಯೆಗಳ ಮಾಹಿತಿ ಪಡೆದು ಅಗತ್ಯ ತಿದ್ದುಪಡಿ, ಸೇರ್ಪಡೆ ಕಾರ್ಯಗಳನ್ನು ಮಾಡುವಂತೆ ಹಾಗೂ ವಿಶೇಷ ಪರಿಷ್ಕರಣೆ ಕುರಿತಂತೆ ತಮ್ಮ ವ್ಯಾಪ್ತಿಯ ಮತದಾರರಿಗೆ ಅರಿವು ಮೂಡಿಸುವಂತೆ ತಿಳಿಸಿದರು.
ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ನಂತರ ಅದರ ಪ್ರತಿಯನ್ನು ಜಿಲ್ಲಾಧಿಕಾರಿ ಕಚೇರಿಯಿಂದ ಪಡೆದು, ಸೇರ್ಪಡೆ, ತಿದ್ದುಪಡಿ ಮತ್ತು ತೆಗೆದು ಹಾಕಿರುವ ಮತ್ತೊಮ್ಮೆ ಪರಿಶೀಲಿಸುವ ಮೂಲಕ, ಶುದ್ದ ಅಂತಿಮ ಮತದಾರರ ಪಟ್ಟಿ ಪ್ರಕಟಣೆಗೆ ಸಹಕರಿಸುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಾಜಪೂತ್, ಕಾಂಗ್ರೆಸ್ ಪಕ್ಷದ ಪ್ರತಿನಿಧಿ ಪ್ರಭಾಕರ್ ಮಾಳೆಸಕರ್, ಬಿಜೆಪಿ ಪಕ್ಷದ ಮನೋಜ್ ಭಟ್ ಉಪಸ್ಥಿತರಿದ್ದರು.
Karwar: Ritish Kumar Singh calls for transparent Electoral Roll revision process